ಹುನಗುಂದ: ಇಂದಿನ ಯುವಜನತೆ ದೇಶದ ಭವಿಷ್ಯವಾಗಿದ್ದು, ಶಿಕ್ಷಣದ ಜೊತೆಗೆ ಸಾಮಾಜಿಕ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವುದು ಅತ್ಯಂತ ಅಗತ್ಯ. ಸ್ವಚ್ಛತೆ, ಪರಿಸರ ಸಂರಕ್ಷಣೆ, ಜಲ ಸಂರಕ್ಷಣೆ, ಆರೋಗ್ಯ ಜಾಗೃತಿ, ರಕ್ತದಾನ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ ಹಾಗೂ ಸಾಮಾಜಿಕ ಸಾಮರಸ್ಯದಂತಹ ಕ್ಷೇತ್ರಗಳಲ್ಲಿ ಸ್ವಯಂಸೇವಕರು ಮಹತ್ವದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹಡಲಗೇರಿ ವಸತಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್.ಎಲ್. ಪಾಟೀಲ ಹೇಳಿದರು.
ಪಟ್ಟಣದ ವಿ.ಎಂ.ಕೆ.ಎಸ್.ಆರ್. ವಸ್ತ್ರದ ಕಲಾ, ವಿಜ್ಞಾನ ಹಾಗೂ ವಿ.ಎಸ್. ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕದ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಎನ್‌ಎಸ್‌ಎಸ್ ಶಿಬಿರಗಳು ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ಜ್ಞಾನವನ್ನಷ್ಟೇ ನೀಡದೆ, ಮಾನವೀಯ ಮೌಲ್ಯಗಳು, ಸೇವಾ ಮನೋಭಾವ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುತ್ತವೆ ಎಂದು ಡಾ. ಪಾಟೀಲ ಹೇಳಿದರು.
ವಿಮವಿವಿ ಸಂಘದ ಗೌರವ ಕಾರ್ಯದರ್ಶಿ ಡಾ. ಮಹಾಂತೇಶ ಕಡಪಟ್ಟಿ ಮಾತನಾಡಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳಲ್ಲಿ ಸೇವೆ, ಶಿಸ್ತು, ನಾಯಕತ್ವ, ಸಾಮಾಜಿಕ ಜವಾಬ್ದಾರಿ ಹಾಗೂ ರಾಷ್ಟ್ರಪ್ರೇಮವನ್ನು ಬೆಳೆಸುತ್ತದೆ. ಸಮಾಜದಿಂದ ನಾವು ಪಡೆದದ್ದನ್ನು ಸಮಾಜಕ್ಕೆ ಮರಳಿ ನೀಡುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದರು. ಪ್ರಾಚಾರ್ಯ ಎಸ್.ಆರ್. ಗೋಲಗೊಂಡ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಸೇವಾಗುಣಗಳನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಲೆಫ್ಟಿನೆಂಟ್ ಎಸ್.ಬಿ. ಚಳಗೇರಿ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಎಸ್.ಆರ್. ನಾಗಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಎಲ್.ಎನ್. ಕುಲಕರ್ಣಿ, ಡಾ. ತಿಪ್ಪೇಸ್ವಾಮಿ ಸೇರಿದಂತೆ ಕಾಲೇಜಿನ ಬೋಧಕ–ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
