ಸುರತ್ಕಲ್: ರಾಷ್ಟ್ರದ ಭವಿಷ್ಯವಾಗಿರುವ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ವೃತ್ತಿ ಉದಾತ್ತವಾದುದು ಎಂದು ಸುರತ್ಕಲ್ ರೋಟರಿ ಕ್ಲಬ್‌ನ ಪೂರ್ವಾಧ್ಯಕ್ಷ ರೊ. ಪಿ. ಪುರುಷೋತ್ತಮ ರಾವ್ ಹೇಳಿದರು.
ಸುರತ್ಕಲ್ ರೋಟರಿ ಕ್ಲಬ್ ಹಾಗೂ ಇಂಟರಾಕ್ಟ್ ಕ್ಲಬ್‌ನ ಸಹಯೋಗದಲ್ಲಿ ಆಯೋಜಿಸಲಾಗಿರುವ ‘ಗುರುಗಳಿಗೆ ನಮನ’ ಕಾರ್ಯಕ್ರಮ ಸರಣಿಯ ಅಂಗವಾಗಿ ಸೂರಿಂಜೆ ಸರಕಾರಿ ಪ್ರೌಢಶಾಲೆಯ ಶಿಕ್ಷಕರನ್ನು ಗೌರವಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯೊಂದಿಗೆ ಅವರ ವ್ಯಕ್ತಿತ್ವ ನಿರ್ಮಾಣದಲ್ಲಿಯೂ ಶಿಕ್ಷಕರು ಮಹತ್ತರ ಪಾತ್ರ ವಹಿಸುತ್ತಾರೆ. ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳು, ಶಿಸ್ತು, ಆತ್ಮವಿಶ್ವಾಸ ಹಾಗೂ ಜವಾಬ್ದಾರಿಯ ಮನೋಭಾವ ಬೆಳೆಸುವಲ್ಲಿ ಶಿಕ್ಷಕರ ಕೊಡುಗೆ ಅಪಾರವಾಗಿದೆ. ಆದ್ದರಿಂದ ಧನಾತ್ಮಕ ಚಿಂತನೆಗಳೊಂದಿಗೆ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುವ ಶಿಕ್ಷಕರನ್ನು ಸಮಾಜ ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಅವರು ಹೇಳಿದರು.
ಶಿಕ್ಷಕರು ಕೇವಲ ಪಠ್ಯ ವಿಷಯಗಳನ್ನು ಬೋಧಿಸುವವರಲ್ಲ. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಅವರ ಸಾಮರ್ಥ್ಯವನ್ನು ಬೆಳೆಸಿ, ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಮಾರ್ಗದರ್ಶನ ನೀಡುವ ಜವಾಬ್ದಾರಿಯನ್ನೂ ಅವರು ನಿರ್ವಹಿಸುತ್ತಾರೆ. ಇಂತಹ ಶಿಕ್ಷಕರ ಸೇವೆಯನ್ನು ಗುರುತಿಸಿ ಗೌರವಿಸುವುದು ಸಮಾಜದ ಕರ್ತವ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸುರತ್ಕಲ್ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ್ ಟಿ. ಎನ್. ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಶಿಕ್ಷಕರ ಸೇವೆ ಅತ್ಯಂತ ಅರ್ಥಪೂರ್ಣವಾಗಿದೆ. ಶಿಕ್ಷಕರಿಗೆ ಗೌರವ ಸಲ್ಲಿಸುವ ಮೂಲಕ ಅವರ ಸೇವೆಯನ್ನು ಅಭಿನಂದಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಶಿಕ್ಷಕರನ್ನು ಗೌರವಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಗುರುಗಳ ಮೇಲಿನ ಗೌರವ ಮತ್ತು ಕೃತಜ್ಞತೆಯ ಭಾವನೆಯನ್ನು ಬೆಳೆಸಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸೂರಿಂಜೆ ಸರಕಾರಿ ಪ್ರೌಢಶಾಲೆಗೆ ಅಭಿನಂದನಾ ಗೌರವ ಫಲಕವನ್ನು ನೀಡಿ ಗೌರವಿಸಲಾಯಿತು. ಶಾಲೆಯ ಶಿಕ್ಷಕರನ್ನು ಗೌರವಪೂರ್ವಕವಾಗಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಇಂಟರಾಕ್ಟ್ ಸಂಯೋಜಕ ರಾಮಮೋಹನ್ ವೈ. ಹಾಗೂ ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


