ಕುಳಾಯಿ: ಇಲ್ಲಿನ ಅನುದಾನಿತ ಶ್ರೀ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ ಮೈರ್ಪಾಡಿ ಕುಳಾಯಿಯಲ್ಲಿ ಶಿಕ್ಷಕ-ರಕ್ಷಕ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮವು ಸೆಪ್ಟೆಂಬರ್ 7 ರಂದು ವಿಜೃಂಭಣೆಯಿಂದ ಜರುಗಿತು.
ಕಾರ್ಯಕ್ರಮದ ಪ್ರಾರಂಭದಲ್ಲಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕಿ ಶ್ರೀಮತಿ ಕೆ. ಕಲಾವತಿ ಅವರು ಮಾತನಾಡಿ, "ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು" ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಹಿಂದೂ ವಿದ್ಯಾದಾಯಿನೀ ಸಂಘದ ಜೊತೆ ಕೋಶಾಧಿಕಾರಿ ಶ್ರೀ ಟಿ.ಎನ್. ರಮೇಶ್ ಹಾಗೂ ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀ ಶ್ರೀನಿವಾಸ ಕುಳಾಯಿ ಅವರು ಗುರುವಿನ ಮಹತ್ವವನ್ನು ತಿಳಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲೆಯ ಮುಖ್ಯಶಿಕ್ಷಕರಾದ ಶ್ರೀ ಗೋಪಾಲ್ ವಿ. ಅವರು ಗುರು-ಶಿಷ್ಯರ ನಡುವಿನ ಪವಿತ್ರ ಸಂಬಂಧದ ಮಹತ್ವದ ಕುರಿತು ಬೆಳಕು ಚೆಲ್ಲಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯ ಕುರಿತು ಅನಿಸಿಕೆ ವ್ಯಕ್ತಪಡಿಸಿ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರನ್ನು ಹಾಗೂ ಶಿಕ್ಷಕೇತರ ಸಿಬ್ಬಂದಿಯವರನ್ನು ಗೌರವಿಸಿ ಸನ್ಮಾನಿಸಲಾಯಿತು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಮಂಜುನಾಥ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಯೋಜಿಸಲಾಯಿತು.
ಶಿಕ್ಷಕ-ರಕ್ಷಕ ಸಂಘದ ಸದಸ್ಯೆ ಶ್ರೀಮತಿ ರೇಷ್ಮಾ ಸರ್ವರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಸದಸ್ಯೆ ಶ್ರೀಮತಿ ಭವ್ಯ ಧನ್ಯವಾದ ಸಮರ್ಪಿಸಿದರು. ಕೊನೆಯಲ್ಲಿ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

