ತುಳು ಭಾಷೆಗೆ ಎರಡನೇ ಆಡಳಿತ ಭಾಷೆ ಸ್ಥಾನಮಾನ: ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ

Upayuktha
0

ಮಂಗಳೂರು: ಕರ್ನಾಟಕ ರಾಜ್ಯದ ಎರಡನೇ ಆಡಳಿತ ಭಾಷೆಯಾಗಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿ, ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.


ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಶುಕ್ರವಾರ ಮಂಗಳೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಪ್ರಾಚೀನ ತುಳು ಭಾಷೆಗೆ ಕರ್ನಾಟಕದ ಎರಡನೇ ಆಡಳಿತ ಭಾಷೆಯಾಗಿ ಅಧಿಕೃತ ಸ್ಥಾನಮಾನ ನೀಡಿರುವ ವಿಚಾರ ತಿಳಿದು ಸಂತೋಷವಾಗಿದೆ ಎಂದು ಅವರು ತಿಳಿಸಿದ್ದಾರೆ.


ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ದೇಶ-ವಿದೇಶಗಳಲ್ಲಿರುವ ತುಳುವರ ಪರವಾಗಿ ರಾಜ್ಯ ಸರ್ಕಾರಕ್ಕೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿರುವ ಅವರು, ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಕ್ರಿಯೆಗೂ ಈ ನಿರ್ಧಾರ ಸಹಕಾರಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


2009ರಲ್ಲಿ ಉಜಿರೆಯಲ್ಲಿ ವಿಶ್ವ ತುಳು ಸಮ್ಮೇಳನವನ್ನು ಆಯೋಜಿಸಿ ತುಳು ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ಕುರಿತು ವಿಶೇಷ ಗಮನ ಸೆಳೆಯಲಾಗಿತ್ತು. ಆ ಸಂದರ್ಭದಲ್ಲಿ ರೂಪಿಸಲಾದ ‘ತುಳುಗ್ರಾಮ’ದ ಕಲ್ಪನೆಯು ಆಕರ್ಷಣೆಯ ಕೇಂದ್ರವಾಗಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರವಾಗಿತ್ತು ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಸ್ಮರಿಸಿದ್ದಾರೆ.


ತುಳುನಾಡಿನ ಜನರ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿರುವುದಕ್ಕೆ ತುಳು ಭಾಷೆ ಮತ್ತು ಸಂಸ್ಕೃತಿಯ ಎಲ್ಲಾ ಅಭಿಮಾನಿಗಳ ಪರವಾಗಿ ವಿಶೇಷ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top