ಕಾಸರಗೋಡು: ಡಾ. ಶ್ರೀಕೃಷ್ಣ ಭಟ್ ಅರ್ತಿಕಜೆಯವರು ಸೃಜನಶೀಲ ಲೇಖಕರಾಗಿ, ಸಂಶೋಧಕರಾಗಿ ಭಾಷೆ, ವ್ಯಾಕರಣ ಹಾಗೂ ಸಂಪಾದನಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಅವರು ಮಾಡಿರುವ ಮೌಲಿಕ ಸಂಶೋಧನಾ ಕೆಲಸಗಳು ಇಂದಿಗೂ ನಾಡಿನ ವಿದ್ವಾಂಸರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಿವೆ”. ಎಂದು ನಿವೃತ್ತ ಪ್ರಾಂಶುಪಾಲ ಪ್ರೊ. ಪಿ. ಎನ್ ಮೂಡಿತ್ತಾಯ ಅಭಿಪ್ರಾಯಪಟ್ಟರು.
ಅವರು ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ವಿಭಅಗವು ಆಯೋಜಿಸಿದ ಡಾ. ಶ್ರೀಕೃಷ್ಣ ಭಟ್ ಅರ್ತಿಕಜೆ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಮದ್ರಾಸ್ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಉಪನ್ಯಾಸಕರಾಗಿ, ಪ್ರಾಧ್ಯಾಪಕರಾಗಿ ಮತ್ತು ವಿಭಾಗ ಮುಖ್ಯಸ್ಥರಾಗಿ ಅವರು ಸಲ್ಲಿಸಿದ ಸೇವೆ ಅನನ್ಯ. ತಮಿಳುನಾಡಿನ ನೆಲದಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಕಟ್ಟಿ ಬೆಳೆಸುವಲ್ಲಿ ಅವರ ಪರಿಶ್ರಮ ಹಿರಿದಾದುದು. ಎಂದು ಪ್ರೊ.ಪಿ.ಎನ್ ಮೂಡಿತ್ತಾಯ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ. ಕಮಲಾಕ್ಷ ಕೆ, ವಿಭಾಗದ ಮುಖ್ಯಸ್ಥೆ ಸುಜಾತಾ ಎಸ್ ಹಾಗೂ ಸ್ನೇಹರಂಗದ ಅಧ್ಯಕ್ಷ ವಿವೇಕ್ ಅವರು ಅರ್ತಿಕಜೆಯವರ ಬದುಕು ಮತ್ತು ಸಾಹಿತ್ಯದ ಕುರಿತು ಮಾತನಾಡಿದರು. ಕನ್ನಡ ವಿಬಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


