ಸರ್ವತೋಮುಖ ಅಭಿವೃದ್ಧಿಗೆ ಬಹುಶಿಸ್ತೀಯ ಅಧ್ಯಯನ ಸಹಕಾರಿ: ಪ್ರೊ. ಜಯವಂತ ನಾಯಕ್

Upayuktha
0



ಮಂಗಳೂರು: ವಿದ್ಯಾರ್ಥಿಗಳು ಸರ್ವತೋಮುಖ ಅಭಿವೃದ್ಧಿ ಹೊಂದಲು ಪಠ್ಯಕ್ರಮದ ಅಧ್ಯಯನದ ಜೊತೆಗೆ ವಿವಿಧ ವಿಷಯಗಳ ಜ್ಞಾನ ಮತ್ತು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ, ತಮ್ಮ ಪ್ರತಿಭೆ ಮತ್ತು ಸಾಮರ್ಥ್ಯವನ್ನು ವಿಭಿನ್ನ ರೀತಿಯಲ್ಲಿ ಪ್ರಸ್ತುತಪಡಿಸುವುದು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅತ್ಯಂತ ಮುಖ್ಯ ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್ ಹೇಳಿದರು.


ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ‘ಜ್ಞಾನಸೇತು – ವಾಣಿಜ್ಯದಿಂದ ಆಚೆಗೆ’ ಸರಣಿಯ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ‘ಕಾರ್ವ್ಯೂಷನ್–2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ. ಶೈಕ್ಷಣಿಕ ಜ್ಞಾನ ಮತ್ತು ಪ್ರಾಯೋಗಿಕ ಅನುಭವಗಳ ನಡುವೆ ಸಂಪರ್ಕ ಕಲ್ಪಿಸುವುದರ ಜೊತೆಗೆ, ವಿವಿಧ ಕ್ಷೇತ್ರಗಳ ಜ್ಞಾನವನ್ನು ಪರಸ್ಪರ ಬೆಸೆಯುವಲ್ಲಿ ಇವು ಮಹತ್ವದ ಪಾತ್ರ ವಹಿಸುತ್ತವೆ. ದೈನಂದಿನ ಬದುಕಿನ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸಲು ಬಹುಶಿಸ್ತೀಯ ಅಧ್ಯಯನ ಸಹಕಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.


ಸ್ನಾತಕೋತ್ತರ ಅಧ್ಯಯನ ವಿಭಾಗದ ಸಲಹೆಗಾರ ಪ್ರೊ. ಎ. ಸಿದ್ದಿಕ್ ಮಾತನಾಡಿ, ‘ಜ್ಞಾನಸೇತು’ ಎಂಬುದು ಜ್ಞಾನದ ವಿವಿಧ ಕ್ಷೇತ್ರಗಳ ನಡುವಿನ ಸೇತುವೆಯಾಗಿದೆ. ಆಧುನಿಕ ಸಮಾಜದಲ್ಲಿ ವಾಣಿಜ್ಯಶಾಸ್ತ್ರವು ಮಾನವಿಕ ವಿಜ್ಞಾನ, ಹಣಕಾಸು ನಿರ್ವಹಣೆ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಅರ್ಥಶಾಸ್ತ್ರ ಸೇರಿದಂತೆ ಹಲವು ಕ್ಷೇತ್ರಗಳೊಂದಿಗೆ ನಿಕಟ ಸಂಬಂಧ ಹೊಂದಿದೆ. ವಿವಿಧ ಶಿಸ್ತಿನ ಜ್ಞಾನವನ್ನು ಪಡೆದುಕೊಳ್ಳುವುದರಿಂದ ವಿದ್ಯಾರ್ಥಿಗಳ ಜ್ಞಾನ ಮತ್ತು ಕೌಶಲ್ಯ ವಿಸ್ತಾರಗೊಳ್ಳುವುದಲ್ಲದೆ, ಉದ್ಯೋಗಾವಕಾಶಗಳೂ ಹೆಚ್ಚುತ್ತವೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಪ್ರೊ. ಸುಭಾಷಿಣಿ ಶ್ರೀವತ್ಸ, ಡಾ. ವೆಂಕಟೇಶ್ ನಾಯಕ್, ಡಾ. ದಿನಕರ್, ಸಂಶೋಧನಾರ್ಥಿ ತೌಷಿಪ್ ಸೇರಿದಂತೆ ವಿವಿಧ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top