ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಇಂಗ್ಲಿಷ್ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಯುಜಿಸಿ-ನೆಟ್ ಹಾಗೂ ಕೆ-ಸೆಟ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವ, ಪರೀಕ್ಷಾ ಸಿದ್ಧತೆ ಮತ್ತು ಯಶಸ್ಸಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಅರಿವು ಮೂಡಿಸುವ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಎಸ್.ಡಿ.ಎಂ. ಕಾಲೇಜಿನ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಮನು ಎ.ಆರ್. ಮಾತನಾಡಿ, ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಪ್ರತಿದಿನ ಅಧ್ಯಯನಕ್ಕೆ ನಿರ್ದಿಷ್ಟ ಸಮಯ ಮೀಸಲಿಡುವುದು, ಅಣಕು ಪರೀಕ್ಷೆಗಳನ್ನು ಬರೆಯುವುದು ಹಾಗೂ ಪ್ರಶ್ನೆಗಳ ಸ್ವರೂಪವನ್ನು ಅರ್ಥಮಾಡಿಕೊಳ್ಳುವುದು ಅಗತ್ಯ ಎಂದರು. ವಿಶೇಷವಾಗಿ, ಸುಲಭವಾಗಿ ಅಂಕ ಗಳಿಸಬಹುದಾದ ಪ್ರಶ್ನೆಗಳನ್ನು ಗುರುತಿಸಿ, ಸಮಯವನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಪರೀಕ್ಷೆಯಲ್ಲಿನ ಸಾಧನೆಯನ್ನು ಸುಧಾರಿಸಬಹುದು ಎಂದು ವಿವರಿಸಿದರು.
ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಲ್ಲಿ ಬರುವ ಬೋಧನಾ ಸಾಮರ್ಥ್ಯ, ಸಂಶೋಧನಾ ಸಾಮರ್ಥ್ಯ, ತಾರ್ಕಿಕ ಚಿಂತನೆ, ದತ್ತಾಂಶ ವ್ಯಾಖ್ಯಾನ, ಉನ್ನತ ಶಿಕ್ಷಣ ವ್ಯವಸ್ಥೆ ಹಾಗೂ ಪರಿಸರ ಸಂಬAಧಿತ ವಿಷಯಗಳ ಪ್ರಶ್ನೆಗಳನ್ನು ಹೇಗೆ ಅರ್ಥೈಸಿ ಉತ್ತರಿಸಬೇಕು ಎಂಬುದರ ಕುರಿತು ಮಾರ್ಗದರ್ಶನ ನೀಡಿದರು. ಕ್ಲಿಷ್ಟಕರ ಪ್ರಶ್ನೆಗಳನ್ನು ಎದುರಿಸುವಾಗ ಗೊಂದಲಕ್ಕೊಳಗಾಗದೆ ಶಾಂತಚಿತ್ತದಿಂದ ಯೋಚಿಸಿ, ತಪ್ಪು ಆಯ್ಕೆಗಳನ್ನು ಗುರುತಿಸಿ ಸರಿಯಾದ ಉತ್ತರವನ್ನು ಆಯ್ಕೆಮಾಡುವ ಕೌಶಲ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ನಿರಂತರ ಅಧ್ಯಯನ, ಪ್ರಚಲಿತ ವಿದ್ಯಮಾನಗಳ ಅರಿವು, ಪರಿಕಲ್ಪನೆಗಳ ಸ್ಪಷ್ಟತೆ ಮತ್ತು ಆತ್ಮವಿಶ್ವಾಸವು ಯಶಸ್ಸಿನ ಸಹಕಾರಿ. ಇಂತಹ ಪರೀಕ್ಷೆಗಳು ಕೇವಲ ಅರ್ಹತೆ ಗಳಿಸುವುದಕ್ಕಷ್ಟೇ ಸೀಮಿತವಾಗಿರದೆ, ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ ಮತ್ತು ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಸಾಮರ್ಥ್ಯಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದರು. ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥ ಡಾ ಟಿ.ಕೆ. ರವೀಂದ್ರನ್, ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಭವ್ಯಾ ಕಾರ್ಯಕ್ರಮ ನಿರೂಪಿಸಿದರು.

.png)
