ನಿವೃತ್ತ ಪ್ರಾಂಶುಪಾಲ ಎನ್.ಜೆ. ಕಡಂಬ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Upayuktha
0


ಉಜಿರೆ: ಹಿರಿಯ ವಕೀಲರು, ದಕ್ಷ ಆಡಳಿತಗಾರರು ಹಾಗೂ ಸಮಾಜಸೇವಕರಾಗಿದ್ದ ನಿವೃತ್ತ ಪ್ರಾಂಶುಪಾಲ ವೇಣೂರು ಕುಕ್ಕೇಡಿಗುತ್ತು ಎನ್.ಜೆ. ಕಡಂಬ ಅವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಎನ್.ಜೆ. ಕಡಂಬ ಅವರ ನಿಧನದ ಸುದ್ದಿ ತಿಳಿದು ವಿಷಾದವಾಯಿತು. ಹಲವು ವರ್ಷಗಳ ಕಾಲ ಬೆಳ್ತಂಗಡಿಯಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದ ಅವರು, ಎಸ್‌ಡಿಎಂ ಎಜುಕೇಶನಲ್ ಟ್ರಸ್ಟ್‌ನ ಆಡಳಿತ ಮಂಡಳಿ ಸದಸ್ಯರಾಗಿ, ವೇಣೂರು ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಸಕ್ರಿಯ ಸದಸ್ಯರಾಗಿ, ಬೆಳ್ತಂಗಡಿ ರೋಟರಿ ಕ್ಲಬ್‌ನ ಸ್ಥಾಪಕ ಅಧ್ಯಕ್ಷರಾಗಿ ಹಾಗೂ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ್ದರು ಎಂದು ಡಾ. ಹೆಗ್ಗಡೆ ಸ್ಮರಿಸಿದ್ದಾರೆ.


ಮಂಗಳೂರಿನಲ್ಲಿ ಎಸ್‌ಡಿಎಂ ಕಾನೂನು ಕಾಲೇಜನ್ನು ಪ್ರಾರಂಭಿಸಿದ ಸಂದರ್ಭದಲ್ಲಿ ಎನ್.ಜೆ. ಕಡಂಬ ಅವರು ಅದರ ಸ್ಥಾಪಕ ಪ್ರಾಂಶುಪಾಲರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ದಕ್ಷ ಆಡಳಿತಗಾರರಾಗಿ ಹಾಗೂ ಶಿಸ್ತಿನ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ ಅವರು, ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿ ಹಾಕುವಲ್ಲಿ ಮಹತ್ವದ ಕೊಡುಗೆ ನೀಡಿದ್ದರು ಎಂದು ಅವರು ತಿಳಿಸಿದ್ದಾರೆ.


ಕಡಂಬ ಅವರ ಮಾರ್ಗದರ್ಶನದಲ್ಲಿ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ಇಂದು ವಿವಿಧ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ರಾಜ್ಯಪಾಲರಾಗಿರುವ ಅಬ್ದುಲ್ ನಜೀರ್, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಷಾರಾಣಿ ಹಾಗೂ ಸಚಿವ ಯು.ಟಿ. ಖಾದರ್ ಅವರು ಕಡಂಬ ಅವರ ಹಿರಿಯ ವಿದ್ಯಾರ್ಥಿಗಳಾಗಿರುವುದು ಅವರ ಶೈಕ್ಷಣಿಕ ಸೇವೆ ಮತ್ತು ಮಾರ್ಗದರ್ಶನದ ಮಹತ್ವವನ್ನು ಸಾರುತ್ತದೆ ಎಂದು ಡಾ. ಹೆಗ್ಗಡೆ ಅಭಿಪ್ರಾಯಪಟ್ಟಿದ್ದಾರೆ.


ಎನ್.ಜೆ. ಕಡಂಬ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಅಗಲಿಕೆಯಿಂದ ದುಃಖತಪ್ತರಾಗಿರುವ ಕುಟುಂಬದ ಸದಸ್ಯರು ಹಾಗೂ ಬಂಧುಗಳಿಗೆ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸುವಂತೆ ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸುವುದಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top