ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯಿಲ್ಲ: ಡಾ. ವೈ. ಭರತ್ ಶೆಟ್ಟಿ ಆರೋಪ

Shreya Hegde
0

 ನೀರುಮಾರ್ಗದಲ್ಲಿ ಬಿಜೆಪಿ ಹಕ್ಕೊತ್ತಾಯ ಸಭೆ  




ನೀರುಮಾರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ಸುಳ್ಳು ಭರವಸೆಗಳ ಮೂಲಕ ಜನರನ್ನು ವಂಚಿಸುತ್ತಿದೆ ಎಂದು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.


ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ನೀರುಮಾರ್ಗ ಪಂಚಾಯತ್ ವ್ಯಾಪ್ತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ 'ನಮ್ಮ ಹಕ್ಕು ನಮಗೆ ನೀಡಿ' ಎಂಬ ಘೋಷಣೆಯೊಂದಿಗೆ ಆಯೋಜಿಸಿದ್ದ ಬೃಹತ್ ಹಕ್ಕೊತ್ತಾಯ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಜನರಿಗೆ ನಿರಂತರವಾಗಿ ಸುಳ್ಳು ಭರವಸೆಗಳನ್ನು ನೀಡುತ್ತಾ ಬಂದಿದೆ. ಮಂಗಳೂರಿಗೆ ₹32,000 ಕೋಟಿ ಅನುದಾನ ನೀಡುವ ಕುರಿತು ನೀಡಿದ್ದ ಭರವಸೆಯ ಬಗ್ಗೆಯೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಡಾ. ಭರತ್ ಶೆಟ್ಟಿ ಟೀಕಿಸಿದರು.


ಜನರ ನಿರೀಕ್ಷೆಗಳನ್ನು ಈಡೇರಿಸಲು ಸಾಧ್ಯವಾಗದ ಸರ್ಕಾರದ ಆಡಳಿತ ವೈಖರಿಯನ್ನು ಪ್ರಶ್ನಿಸಿದ ಅವರು, ಈ ಸರ್ಕಾರಕ್ಕೆ ₹30 ನೀಡುವ ಯೋಗ್ಯತೆ ಇಲ್ಲದ ಕುರಿತು ಸರಕಾರದ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು. ಜನರ ಹಕ್ಕುಗಳನ್ನು ರಕ್ಷಿಸಲು ಮತ್ತು ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಮಾಜಿ ಮೇಯರ್ ಜಯಾನಂದ ಅಂಚನ್, ಮಾಜಿ ಪಂಚಾಯತ್ ಅಧ್ಯಕ್ಷರು ಕಸ್ತೂರಿ, ಶಕ್ತಿ ಕೇಂದ್ರ ಪ್ರಮುಖ್ ಯಶ್ವಿತ್ ಕುಂದರ್ ಸೇರಿದಂತೆ ಪಕ್ಷದ ಹಿರಿಯರು, ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top