ಸುರತ್ಕಲ್: ಇಲ್ಲಿನ ಚಿತ್ರಾಪುರ ಕುಳಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಫಿಶರೀಶ್‌ನಲ್ಲಿ ಶಾಲಾಭಿವೃದ್ಧಿ ಸಮಿತಿ ಮತ್ತು ಹಳೆ ವಿದ್ಯಾರ್ಥಿಗಳ ಸಂಘದ ಜಂಟಿ ಸಹಯೋಗದೊಂದಿಗೆ ಮಹಾತ್ಮ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಸುರತ್ಕಲ್‌ನ ಕೆ.ಆರ್.ಇ.ಸಿ. (ಎನ್.ಐ.ಟಿ.ಕೆ.) ಕಿಡ್ಸ್ ಸಂಸ್ಥೆಯ ವತಿಯಿಂದ ಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ಕಪಾಟುಗಳನ್ನು ಕೊಡುಗೆಯಾಗಿ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕೆ.ಆರ್.ಇ.ಸಿ. ಕಿಡ್ಸ್‌ನ ಅಧ್ಯಕ್ಷ ಪ್ರೊ. ಶ್ರೀನಿವಾಸ ರಾವ್ ಪಾದೆಬೆಟ್ಟು ಅವರು, "ಸತ್ಯ, ಪ್ರಾಮಾಣಿಕತೆ ಮತ್ತು ಸರಳತೆಯ ಪ್ರತೀಕಗಳಾದ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಜೀವನಾದರ್ಶಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು" ಎಂದು ಕರೆ ನೀಡಿದರು.
ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರೊ. ಕೃಷ್ಣ ಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕಿ ಪುಷ್ಪಾವತಿ ಶ್ರೀನಿವಾಸ ರಾವ್, ಶ್ರೀನಿವಾಸ ರಾವ್ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯ ತೇಜಪಾಲ್ ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶಶಿಕಲಾ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಹಾಗೂ ಮಹಾಪುರುಷರ ಕುರಿತು ಭಾಷಣಗಳು ಜರುಗಿದವು. ನಂತರ ಶಾಲಾ ಆವರಣ ಹಾಗೂ ಪರಿಸರದಲ್ಲಿ ಹಳೆ ವಿದ್ಯಾರ್ಥಿಗಳು, ಸಮಿತಿಯ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಶಾಲೆಯ ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿ, ಸುಕೇಶಿನಿ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ನೀತಾ ತಂತ್ರಿ, ಸಿಂತಿಯ, ರೂಪ, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು.
