ಮಹರ್ಷಿ ವಾಲ್ಮೀಕಿಯ ಆದರ್ಶಗಳು ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿ: ದಿವಸ್ಪತಿ
ಸುರತ್ಕಲ್: ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೆ ಒಳಪಟ್ಟ ಅನುದಾನಿತ ವಿದ್ಯಾದಾಯಿನೀ ಪ್ರೌಢಶಾಲೆಯಲ್ಲಿ ಅ. 26ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧೆ ಮತ್ತು ಸಡಗರದಿಂದ ಆಚರಿಸಲಾಯಿತು.
ಸಂಘದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಾಗೂ ಶಾಲಾ ಸಂಚಾಲಕರಾದ ಸುಧಾಕರ್ ರಾವ್ ಪೇಜಾವರ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ದಿವಸ್ಪತಿ ಅವರು ಎಲ್ಲರನ್ನು ಸ್ವಾಗತಿಸಿ, ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಕವಿಕೋಗಿಲೆ ಎಂದೇ ಪ್ರಸಿದ್ಧರಾದ ಮಹರ್ಷಿ ವಾಲ್ಮೀಕಿಯವರು ಜಗತ್ತಿಗೆ ಶ್ರೇಷ್ಠ ಮಹಾಕಾವ್ಯವಾದ ರಾಮಾಯಣವನ್ನು ನೀಡಿದ್ದಾರೆ. ಅವರ ಜೀವನ ಮತ್ತು ಆದರ್ಶಗಳು ಇಂದಿನ ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕು” ಎಂದು ಹೇಳಿದರು.
ಸಾಮಾನ್ಯ ಬೇಡನಾಗಿದ್ದ ರತ್ನಾಕರನು ತಪಸ್ಸು ಮತ್ತು ಸಾಧನೆಯ ಮೂಲಕ ಮಹರ್ಷಿ ವಾಲ್ಮೀಕಿಯಾಗಿ ರೂಪುಗೊಂಡ ಪ್ರೇರಣಾದಾಯಕ ಕಥೆಯನ್ನು ಹಾಗೂ ರಾಮಾಯಣ ರಚನೆಯ ಹಿನ್ನೆಲೆಯನ್ನು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ವಿವರಿಸಿದರು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸತ್ಯ, ಧರ್ಮ ಮತ್ತು ಆದರ್ಶ ಗುಣಗಳನ್ನು ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲೆಯ ಹಿರಿಯ ಶಿಕ್ಷಕಿ ಪುಷ್ಪ ಅವರು ವಂದನಾರ್ಪಣೆ .


