ಸರ್ಕಾರಿ, ಅರಣ್ಯ ಜಾಗದ ಆಸ್ತಿಯನ್ನು ತೆರಿಗೆಯಿಂದ ಹೊರಗಿಡುವ ಸುತ್ತೋಲೆಗೆ ತಡೆ

Shreya Hegde
0

ಆಗಸ್ಟ್ 13ರ ಸುತ್ತೋಲೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ


ಬೆಂಗಳೂರು: ತೆರಿಗೆ ನಿರ್ಧರಣೆ ಹಾಗೂ ಇ-ಸ್ವತ್ತು 2.0 ತಂತ್ರಾಂಶದಿಂದ ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿನ ಆಸ್ತಿಗಳನ್ನು ಕೈಬಿಡುವ ಬಗ್ಗೆ ಕಳೆದ ಆಗಸ್ಟ್ 13ರಂದು ಹೊರಡಿಸಲಾಗಿರುವ ಸುತ್ತೋಲೆಗೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.


ಈ ಹಿಂದೆ ವಿಧಾನಮಂಡಲದ ಉಭಯ ಸದನಗಳಲ್ಲಿ ಅನುಮೋದನೆಯಾಗಿದ್ದ ಹಾಗೂ ರಾಜ್ಯಪಾಲರ ಅಂಗೀಕಾರ ಪಡೆದಿದ್ದ ಕಾಯಿದೆಗೆ ಸಂಬಂಧಿಸಿದಂತೆ ಈ ಸುತ್ತೋಲೆಯನ್ನು ಇಲಾಖೆ ವತಿಯಿಂದ ಹೊರಡಿಸಲಾಗಿತ್ತು. ಆದರೆ ಕಸ್ತೂರಿ ರಂಗನ್ ವರದಿಯ ಮೇಲಿನ ಚರ್ಚೆಯ ವೇಳೆ ವಿಶೇಷ ಅಧಿವೇಶನದಲ್ಲಿ ಹಲವು ಜನಪ್ರತಿನಿಧಿಗಳು ಪಕ್ಷಾತೀತವಾಗಿ ಈ ಸುತ್ತೋಲೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿಗಳು ಸದನದಲ್ಲಿ ಭರವಸೆ ನೀಡಿದಂತೆ ಈಗ ಆಗಸ್ಟ್ 13ರ ಆದೇಶಕ್ಕೆ ತಡೆ ನೀಡಲಾಗಿದೆ ಎಂದು ತಿಳಿಸಿದರು.


ಕಾಡಿನಂಚಿನಲ್ಲಿರುವ ಮತ್ತು ಸರ್ಕಾರಿ ಭೂಮಿಯಲ್ಲಿ ಈಗಾಗಲೇ ಮನೆ ಕಟ್ಟಿಕೊಂಡು ವಾಸಿಸುತ್ತಿರುವವರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿರುವ ಈಶ್ವರ ಖಂಡ್ರೆ, ಕಂದಾಯ, ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ  ಬಹು ಇಲಾಖೆಯ ಅಧಿಕಾರಿಗಳ ಉನ್ನತಮಟ್ಟದ ಸಮಿತಿ ರಚಿಸಿ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.


ಈ ಸಂಬಂಧ ಇಂದು ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದು, ಮುಂದಿನ ಆದೇಶದವರೆಗೆ ಆಗಸ್ಟ್ 13ರ ಸುತ್ತೋಲೆಗೆ ಸಂಬಂಧಿಸಿದಂತೆ ಯಾವುದೇ ಪ್ರಕ್ರಿಯೆ ಕೈಗೊಳ್ಳದಿರಲು ಸೂಚಿಸಲಾಗಿದೆ ಎಂದೂ ತಿಳಿಸಿದ್ದಾರೆ.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top