ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಬಾಹ್ಯಾಕಾಶ ಸಪ್ತಾಹ-2026ರ ಆಚರಣೆ

Shreya Hegde
0


ಪಿಲಿಕುಳ:
ವಿಶ್ವ ಬಾಹ್ಯಾಕಾಶ ಸಪ್ತಾಹದ ಅಂಗವಾಗಿ 2026ರ ಅಕ್ಟೋಬರ್ 7ರಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರಿನ ಯು.ಆರ್. ರಾವ್ ಉಪಗ್ರಹ ಕೇಂದ್ರ (URSC) ಹಾಗೂ ಇಸ್ರೋ ಇವರ ಸಹಯೋಗದೊಂದಿಗೆ ವಿಶ್ವ ಬಾಹ್ಯಾಕಾಶ ಸಪ್ತಾಹ 2026ರ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯು.ಆರ್. ರಾವ್ ಉಪಗ್ರಹ ಕೇಂದ್ರದ ಉಪನಿರ್ದೇಶಕರಾದ ಡಾ. ಸಿ.ಎಸ್ ಮಧುಸೂದನ ಅವರು, ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ, ಪರಿಶೀಲಿಸುವ ಹಾಗೂ ಸಾಕ್ಷ್ಯಾಧಾರಿತವಾಗಿ ಚಿಂತಿಸುವ ಮನೋಭಾವವನ್ನು ಅಭಿವೃದ್ಧಿಪಡಿಸಬೇಕು ಎಂದರು. ತಂತ್ರಜ್ಞಾನದ ಮಿತ ಬಳಕೆ ಮಾಡಿ ಪುಸ್ತಕದಲ್ಲಿರುವ ವಿದ್ಯೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಅಪೂರ್ವ ಸಂಗಮ ಇಲ್ಲಿ ಆಗಿದ್ದು, ನೀವೆಲ್ಲರೂ ಬಾಹ್ಯಾಕಾಶದ ಬಗ್ಗೆ ಅಪಾರ ಜ್ಞಾನ ಪಡೆದು ದೇಶಕ್ಕೆ ಕೊಡುಗೆ ನೀಡಲು ಸಾಕ್ಷಿಯಾಗಬೇಕು ಎಂದು ತಿಳಿಸಿದರು.


ಮುಖ್ಯ ಅತಿಥಿಯಾಗಿ ಮಾತನಾಡಿದ NITK ಸುರತ್ಕಲ್‌ನ ನಿವೃತ್ತ ಪ್ರಾಧ್ಯಾಪಕ ಪ್ರೊ. ಜಿ. ಶ್ರೀನಿಕೇತನ್, ರಾಕೆಟ್ ತಂತ್ರಜ್ಞಾನದಲ್ಲಿನ ನಿರಂತರ ಸಂಶೋಧನೆ ಮತ್ತು ನವೀನ ಆವಿಷ್ಕಾರಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಸಾಧ್ಯತೆಗಳಿಗೆ ದಾರಿ ಮಾಡಿಕೊಟ್ಟಿವೆ ಎಂದರು. ಈ 'ರಾಕೆಟ್ ಕ್ರಾಂತಿ'ಯ ಮೂಲಕ ಭಾರತವು ಬಾಹ್ಯಾಕಾಶ ಅನ್ವೇಷಣೆಯಲ್ಲಿ ಮಹತ್ವದ ಸಾಧನೆ ಮಾಡುತ್ತಿದೆ. ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸುವುದರ ಜೊತೆಗೆ, ವಿಜ್ಞಾನ ಮತ್ತು ಶಿಕ್ಷಣದ ಬಗ್ಗೆ ಆಸಕ್ತಿ ಹೆಚ್ಚಿಸಿ, ಭವಿಷ್ಯದಲ್ಲಿ ದೇಶಕ್ಕೆ ಹೆಮ್ಮೆ ತರುವ ಸಾಧನೆ ಮಾಡಬೇಕು ಎಂದು ಹೇಳಿದರು. 


ಅಧ್ಯಕ್ಷತೆ ವಹಿಸಿ ಮಾತನಾಡಿದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ. ಅರುಣ ಕುಮಾರ್ ಶೆಟ್ಟಿ ಎನ್., ವಿಕಸಿತ ಭಾರತದ ನಿರ್ಮಾಣಕ್ಕಾಗಿ ನವೀನ ಆಲೋಚನೆಗಳು, ತಂತ್ರಜ್ಞಾನ ಮತ್ತು ಪರಸ್ಪರ ಸಹಯೋಗಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದರು. ಜನರ ಜೀವನವನ್ನು ಇನ್ನಷ್ಟು ಉತ್ತಮಗೊಳಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಹೊಸ ಆಲೋಚನೆಗಳನ್ನು ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಭಾರತವನ್ನು ವಿಶ್ವದ ಅಗ್ರಸ್ಥಾನಕ್ಕೆ ಕೊಂಡೊಯ್ಯಲು ಎಲ್ಲರೂ ಕಂಕಣಬದ್ಧರಾಗಬೇಕು ಎಂದು ಕರೆ ನೀಡಿದರು.


ಕಾರ್ಯಕ್ರಮದ ನಂತರ ಸ್ವಾಮಿ ವಿವೇಕಾನಂದ ತಾರಾಲಯದ ಪಕ್ಕದ ಗ್ಯಾಲರಿಯಲ್ಲಿ ಇಸ್ರೋ ವತಿಯಿಂದ ಬಾಹ್ಯಾಕಾಶಕ್ಕೆ ಸಂಬಂಧಿಸಿದ ಮಾದರಿಗಳನ್ನು ವಿದ್ಯಾರ್ಥಿಗಳು ವೀಕ್ಷಿಸಿದರು. ವಿಶೇಷವಾಗಿ ತಾರಾಲಯದಲ್ಲಿ 'ದಿ ಮೂನ್' ಎಂಬ 2ಡಿ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಮಧ್ಯಾಹ್ನದ ನಂತರ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇಸ್ರೋ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ಅಲ್ಲದೆ, ಉಪಗ್ರಹ ಮಾದರಿಗಳ ತಯಾರಿಕೆಯ ಸ್ಪರ್ಧೆಯನ್ನು ಸಹ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬಹುಮಾನ ವಿತರಣೆ ಸಮಾರಂಭದಲ್ಲಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದು, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಪುರಸ್ಕರಿಸಲಾಯಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಡಿಪ್ಲೊಮ ಕಾಲೇಜುಗಳ ಸುಮಾರು 750 ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


ಈ ಸಮಾರಂಭದಲ್ಲಿ ವೀರೇಂದ್ರ ಆರ್ ಕವಿ ಶೆಟ್ಟಿ ಉಪಸ್ಥಿತರಿದ್ದರು. ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ. ಅಶೋಕ್ ಕೆ.ಆರ್ ಸ್ವಾಗತಿಸಿದರು. ಶೈಕ್ಷಣಿಕ ಸಹಾಯಕಿ ಶ್ರೀಮತಿ ಚಂಚಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು ಮತ್ತು ವೈಜ್ಞಾನಿಕಾಧಿಕಾರಿ ವಿಶ್ವೇಶ್ ಭಟ್ ವಂದಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top