ಕುಳಾಯಿ ಶ್ರೀ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರದ ಮಕ್ಕಳ ದಿನಾಚರಣೆ

Shreya Hegde
0



ಕುಳಾಯಿ: ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 136ನೇ ಜನ್ಮದಿನಾಚರಣೆಯ ಅಂಗವಾಗಿ, ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೆ ಒಳಪಟ್ಟ ಅನುದಾನಿತ ಶ್ರೀ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ ಮೈರ್ಪಾಡಿ ಕುಳಾಯಿ ಇಲ್ಲಿ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು.


ಶ್ರೀ ಎಂ. ಶಂಕರನಾರಾಯಣಯ್ಯ ಚಾರಿಟೇಬಲ್ ಟ್ರಸ್ಟ್ (ರಿ) ಕುಳಾಯಿ, ಶ್ರೀಮತಿ ಸುಮತಿ ಫೌಂಡೇಶನ್ ಹಾಗೂ ಶಾಲಾ ಶಿಕ್ಷಕ-ರಕ್ಷಕ ಸಂಘದ ಜಂಟಿ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿಶೇಷವೆಂದರೆ, ಶಾಲಾ ನಾಯಕ ಕು| ಶಾಧಿಕ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಎಂ. ಶಂಕರನಾರಾಯಣಯ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ  ಎಂ. ರಮೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ಹೆಚ್. ಶ್ರೀಧರ್, ಟ್ರಸ್ಟ್‌ನ ಸದಸ್ಯರಾದ ಎಂ. ನರೇಂದ್ರ, ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀನಿವಾಸ ಕುಳಾಯಿ, ಶ್ರೀಮತಿ ದೇವಿಕಾ ಪವನ್ ಮೈರ್ಪಾಡಿ ಕುಳಾಯಿ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ  ಗೋಪಾಲ್ ವಿ. ಉಪಸ್ಥಿತರಿದ್ದು, ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸಿ ಶುಭ ಹಾರೈಸಿದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ದಿನಾಚರಣೆಯ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.


ಇದೇ ಸಂದರ್ಭದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಸಂಯೋಜಕರಾದ ಎಂ. ಶಂಕರನಾರಾಯಣಯ್ಯ ಚಾರಿಟೇಬಲ್ ಟ್ರಸ್ಟ್ (ರಿ) ಕುಳಾಯಿ ಹಾಗೂ ಅತಿಥಿಗಳಾದ ಶ್ರೀಮತಿ ದೇವಿಕಾ ಪವನ್ ಮೈರ್ಪಾಡಿ ಅವರು ಬಹುಮಾನಗಳ ಪ್ರಾಯೋಜಕತ್ವದ ಜೊತೆಗೆ ಸಿಹಿತಿಂಡಿ ಹಾಗೂ ಪಾಯಸದ ವ್ಯವಸ್ಥೆ ಮಾಡಿದ್ದರು.


ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಇಡೀ ಕಾರ್ಯಕ್ರಮವನ್ನು ವಿದ್ಯಾರ್ಥಿಗಳೇ ಅಚ್ಚುಕಟ್ಟಾಗಿ ನಿರೂಪಿಸಿದ್ದು ವಿಶೇಷವಾಗಿತ್ತು. ಸಮಾರಂಭದಲ್ಲಿ ಎಂ. ಶಂಕರನಾರಾಯಣಯ್ಯ ಚಾರಿಟೇಬಲ್ ಟ್ರಸ್ಟ್‌ನ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು, ಶಾಲಾ ಶಿಕ್ಷಕ ವೃಂದ ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಂತ್ಯದಲ್ಲಿ ಕಲಾ ಕುಂಭ ಕುಳಾಯಿ ಇದರ ನಿರ್ದೇಶಕರಾದ ನಾಗೇಶ್ ಕುಲಾಲ್ ಅವರು ಕೊಡುಗೆಯಾಗಿ ನೀಡಿದ ಸಿಹಿತಿಂಡಿಯನ್ನು ಮಕ್ಕಳಿಗೆ ವಿತರಿಸಲಾಯಿತು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top