ಉಜಿರೆ: ಧರ್ಮಸ್ಥಳ ಗ್ರಾಮಕ್ಕೂ ದೇವಸ್ಥಾನಕ್ಕೂ ಅವಿನಾಭಾವ ಸಂಬಂಧವಿದ್ದು, ಇಲ್ಲಿ ಸದಾ ಶಾಂತಿ, ನೆಮ್ಮದಿ, ಸಾಮರಸ್ಯ ಹಾಗೂ ಕೋಮುಸೌಹಾರ್ದ ನೆಲೆಸಿದೆ. ಆದರೆ ಕ್ಷೇತ್ರದ ಪ್ರಗತಿ ಮತ್ತು ಸೇವಾಕಾರ್ಯಗಳ ಯಶಸ್ಸಿನಿಂದ ಮತ್ಸರಗೊಂಡ ಕೆಲವರು ಅಪಪ್ರಚಾರದ ಮೂಲಕ ಕ್ಷೇತ್ರಕ್ಕೆ ಮಸಿ ಬಳಿಯುವ ವಿಫಲ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಆರೋಪಿಸಿದರು.
ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಶನಿವಾರ ನಡೆದ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ಷಡ್ಯಂತ್ರವನ್ನು ಖಂಡಿಸುವ ಊರಿನ ನಾಗರಿಕರ ಸಮಾಲೋಚನಾ ಸಭೆಯಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಹಿಂದೂಗಳು, ಜೈನರು, ಮುಸ್ಲಿಮರು ಮತ್ತು ಕ್ರೈಸ್ತರು ಸೇರಿದಂತೆ ಎಲ್ಲ ಧರ್ಮದ ಜನರು ಧರ್ಮಸ್ಥಳದ ಭಕ್ತರಾಗಿದ್ದು, ಶ್ರದ್ಧಾಭಕ್ತಿಯಿಂದ ನಡೆದುಕೊಳ್ಳುತ್ತಿದ್ದಾರೆ. ಇಂತಹ ಸಾಮರಸ್ಯದ ವಾತಾವರಣವಿರುವ ಕ್ಷೇತ್ರದ ಬಗ್ಗೆ ಕಳೆದ ಎರಡು ವರ್ಷಗಳಿಂದ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ ಟಿ. ಹಾಗೂ ಅವರ ಸಂಗಡಿಗರು ಸುಳ್ಳು ಮಾಹಿತಿ ಹರಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
2000ರಿಂದ 2014ರವರೆಗೆ ಧರ್ಮಸ್ಥಳದಲ್ಲಿ 1,510 ಅಸಹಜ ಸಾವುಗಳು ಸಂಭವಿಸಿವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಮಾಹಿತಿ ಹಕ್ಕಿನಡಿ ಪಡೆದ ಮಾಹಿತಿಯ ಪ್ರಕಾರ ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಅವಧಿಯಲ್ಲಿ 374 ಅಸಹಜ ಸಾವುಗಳು ಸಂಭವಿಸಿರುವುದು ತಿಳಿದುಬಂದಿದೆ ಎಂದು ಹೇಳಿದರು.
ಬೆಳ್ತಂಗಡಿ ತಾಲೂಕು 81 ಗ್ರಾಮಗಳನ್ನು ಹೊಂದಿರುವ ಜಿಲ್ಲೆಯ ಅತಿದೊಡ್ಡ ತಾಲೂಕಾಗಿದೆ. ಆರಂಭದಲ್ಲಿ ತಾಲೂಕು ಕೇಂದ್ರದಲ್ಲಿ ಮಾತ್ರ ಪೊಲೀಸ್ ಠಾಣೆ ಇದ್ದು, ಬಳಿಕ ಪುಂಜಾಲಕಟ್ಟೆ, ವೇಣೂರು ಮತ್ತು ಧರ್ಮಸ್ಥಳಗಳಲ್ಲಿ ಪೊಲೀಸ್ ಠಾಣೆಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಅಸಹಜ ಸಾವುಗಳ ಕುರಿತು ಸರಿಯಾದ ಮಾಹಿತಿಯನ್ನು ಪರಿಗಣಿಸದೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅವರು ದೂರಿದರು.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಕೂಡ ಇದೇ ಸಂಖ್ಯೆಯನ್ನು ಉಲ್ಲೇಖಿಸಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಸುಳ್ಳು ಮಾಹಿತಿ ಮತ್ತು ಅಪಪ್ರಚಾರದಿಂದ ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ಉಂಟಾಗಿದೆ ಎಂದರು.
ಗ್ರಾಮಕ್ಕೆ ಸಂಬಂಧಿಸಿದ ಯಾವುದೇ ತೀರ್ಮಾನ ಕೈಗೊಳ್ಳುವ ಮೊದಲು ಗ್ರಾಮಸ್ಥರ ಅಹವಾಲುಗಳನ್ನು ಆಲಿಸಬೇಕು ಎಂದು ಅವರು ಸಲಹೆ ನೀಡಿದರು. ಈ ಕುರಿತು ಮುಖ್ಯಮಂತ್ರಿ, ಗೃಹ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಎಲ್ಲ ಶಾಸಕರಿಗೆ ಮನವಿಯ ಪ್ರತಿಯನ್ನು ಕಳುಹಿಸಿಕೊಡಲಾಯಿತು.
ಸಭೆಯಲ್ಲಿ ವಕೀಲ ಕೇಶವ ಬೆಳಾಲು ಸೇರಿದಂತೆ ಹಲವು ಗ್ರಾಮಸ್ಥರು ಉಪಸ್ಥಿತರಿದ್ದು, ಸಕ್ರಿಯವಾಗಿ ಭಾಗವಹಿಸಿದರು. ಸೂಕ್ತ ನ್ಯಾಯ ದೊರಕದಿದ್ದಲ್ಲಿ ಮುಂದಿನ ದಿನಗಳಲ್ಲಿ ಕಾನೂನುಬದ್ಧವಾಗಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಶ್ರೀನಿವಾಸ ರಾವ್ ಎಚ್ಚರಿಕೆ ನೀಡಿದರು.


