ಪಾಣೆಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಶಾಲಾ ಸಭಾಂಗಣದಲ್ಲಿ ಶನಿವಾರ (ನ. 14) ದತ್ತಿ ಉಪನ್ಯಾಸ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್ ಅವರು, "ವಿದ್ಯಾರ್ಥಿಗಳು ಬಾಲ್ಯದಿಂದಲೇ ಸಾಹಿತ್ಯದ ಕಡೆಗೆ ಹೆಚ್ಚು ಹೆಚ್ಚು ಒಲವನ್ನು ಬೆಳೆಸಿಕೊಳ್ಳಬೇಕು. ಮಕ್ಕಳಲ್ಲಿ ತಿಳುವಳಿಕೆ ಮೊಳೆತು ಸಾಹಿತ್ಯ ಕೃಷಿ ಹುಲುಸಾಗಿ ಬೆಳೆಯಬೇಕು. ಪ್ರತಿಯೊಬ್ಬರೂ ಕನ್ನಡ ಸಾಹಿತ್ಯಾಭಿಮಾನವನ್ನು ಹೆಚ್ಚಿಸಿಕೊಳ್ಳುವ ಮೂಲಕ ನಾಡು-ನುಡಿಯ ಸೇವೆ ಮಾಡಬೇಕು" ಎಂದು ಕರೆ ನೀಡಿದರು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶ್ರೀ ಶಾರದಾ ಪ್ರೌಢಶಾಲೆಯ ಸಂಚಾಲಕ ಡಾ. ಪಿ. ವಿಶ್ವನಾಥ್ ನಾಯಕ್ ಅವರು, ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯ ಕೋರಿ, ಶೈಕ್ಷಣಿಕ ಪ್ರಗತಿಯ ಜೊತೆಗೆ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.
ದತ್ತಿ ಉಪನ್ಯಾಸ:
ಕಾರ್ಯಕ್ರಮದ ಅಂಗವಾಗಿ ನಡೆದ ದತ್ತಿ ಉಪನ್ಯಾಸದಲ್ಲಿ ಹಿರಿಯ ಸಾಹಿತಿ ಶ್ರೀಮತಿ ಸವಿತಾ ಎಸ್. ಭಟ್ ಅಡ್ವಾಯಿ ಪೆರುವಾಯಿ ಅವರು ಮಾತನಾಡಿ, ಸಂಸ್ಕೃತ ಮತ್ತು ಕನ್ನಡ ಭಾಷೆಗಳ ನಡುವಿನ ಅವಿನಾಭಾವ ಬಾಂಧವ್ಯ ಹಾಗೂ ಪ್ರೊ. ಎಂ. ರಾಮಕೃಷ್ಣ ಭಟ್ ಅವರ ಸಾಹಿತ್ಯ ಕೊಡುಗೆಗಳ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ದತ್ತಿ ನಿಧಿ ದಾನಿಗಳಾದ ಪ್ರೊ. ಎಂ. ರಾಮಕೃಷ್ಣ ಭಟ್ ಅವರ ಸುಪುತ್ರ ಡಾ. ಶಿವಕುಮಾರ್ ಅವರು ಮಾತನಾಡಿ, ತಮ್ಮ ತಂದೆಯವರ ಜೀವನ ಶಿಸ್ತು, ಆದರ್ಶ ಮತ್ತು ಅಪಾರ ಪಾಂಡಿತ್ಯದ ನೆನಪುಗಳನ್ನು ಸಭೆಯೊಂದಿಗೆ ಹಂಚಿಕೊಂಡರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಶಿವಪ್ಪ ನಾಯ್ಕ, ಹಿರಿಯ ಶಿಕ್ಷಕಿ ಶ್ರೀಮತಿ ವೀಣಾ ಕೆ. ಹಾಗೂ ದತ್ತಿ ನಿಧಿ ದಾನಿಗಳ ಕುಟುಂಬಸ್ಥರು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಶಿವಪ್ಪ ನಾಯ್ಕ ಸ್ವಾಗತಿಸಿದರು. ಶಿಕ್ಷಕ ಅಜಿತ್ ಕುಮಾರ್ ಅವರು ವಿವಿಧ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ವಾಚಿಸಿದರು. ಕನ್ನಡ ಭಾಷಾ ಶಿಕ್ಷಕ ಸುಧಾಕರ್ ಕಾರ್ಯಕ್ರಮ ನಿರೂಪಿಸಿದರೆ, ಶಿಕ್ಷಕಿ ಸ್ವಾತಿ ರಾವ್ ವಂದಿಸಿದರು.

