ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರುವ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಮಾತನಾಡಿ ಕನ್ನಡ ಭಾಷೆಯು ನಮ್ಮ ನಾಡಿನ ಹೆಮ್ಮೆ ಮತ್ತು ಅಸ್ಮಿತೆಯ ಪ್ರತೀಕವಾಗಿದ್ದು, ಅದರ ಉಳಿವು ಮತ್ತು ಬೆಳವಣಿಗೆಯಲ್ಲಿ ಪ್ರತಿಯೊಬ್ಬರ ಪಾತ್ರವು ಮಹತ್ವದ್ದಾಗಿದೆ ಎಂದು ಹೇಳಿ, ಕನ್ನಡ ಭಾಷೆಯನ್ನು ಕೇವಲ ಸಂವಹನದ ಮಾಧ್ಯಮವಾಗಿ ಮಾತ್ರವಲ್ಲದೆ, ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಪ್ರತಿಬಿಂಬವಾಗಿ ಕಾಣಬೇಕು. ವಿದ್ಯಾರ್ಥಿಗಳು ಮಾತೃಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಂಡು ಕನ್ನಡ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯನ್ನು ಗೌರವಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ವತಿಯಿಂದ ನಡೆಸಲ್ಪಟ್ಟ ಬಾಲಸಾಹಿತಿಗಳ ಸಮಾವೇಶದಲ್ಲಿ ಭಾಗವಹಿಸಿದ ಸಂಸ್ಥೆಯ ಬಾಲ ಸಾಹಿತಿಗಳು ಸ್ವರಚಿತ ಕವನ, ಪ್ರವಾಸ ಕಥನ ಹಾಗೂ ನನ್ನ ಆಪ್ತಮಿತ್ರೆ ಲೇಖನಗಳನ್ನು ವಾಚಿಸಿದರು. ಕಾರ್ಯಕ್ರಮದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಅನರ್ಘ್ಯಶ್ರೀ ಹೆಚ್ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು.10ನೇ ತರಗತಿಯ ಅದಿತಿ ಎನ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಶಿಕ್ಷಕಿಯರಾದ ಪ್ರಿಯಾಶ್ರೀ ಕೆ ಎಸ್ ಮತ್ತು ದಿವ್ಯಾರವರು ಕಾರ್ಯಕ್ರಮವನ್ನು ನಿರ್ವಹಿಸಿದರು.

