ಸುರತ್ಕಲ್: ಇಲ್ಲಿನ ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಅನುದಾನಿತ ವಿದ್ಯಾದಾಯಿನೀ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ದೀಪ ಬೆಳಗಿಸಿ, ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿಂದು ವಿದ್ಯಾದಾಯಿನೀ ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಶಾಲಾ ಸಂಚಾಲಕರಾದ ಶ್ರೀ ಸುಧಾಕರರಾವ್ ಪೇಜಾವರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು, ಸಂಸ್ಕಾರ ಮತ್ತು ಪರಿಶ್ರಮದ ಮಹತ್ವವನ್ನು ವಿವರಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಾಲೆಯ ಹಳೆ ವಿದ್ಯಾರ್ಥಿನಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ಕಛೇರಿಯ ಅಭಿಯಂತರರಾದ ಶ್ರೀಮತಿ ಲಾವಣ್ಯ ಅವರು ಮಾತನಾಡಿ, "ಇಂದಿನ ಮಕ್ಕಳೇ ಮುಂದಿನ ಜನಾಂಗದ ಶಕ್ತಿಗಳು. ಉತ್ತಮ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಅತ್ಯಂತ ಮಹತ್ವದ್ದಾಗಿದೆ" ಎಂದು ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಶ್ರೀಹರಿ ಎಂ. ಅವರು ವಿದ್ಯಾರ್ಥಿಗಳಿಗೆ ಹಿತವಚನ ನೀಡಿ ಶುಭ ಕೋರಿದರು. ವೇದಿಕೆಯಲ್ಲಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶಶಿಕಲಾ, ಶ್ರೀ ದೇವಪ್ಪ ವಸಂತ ಕುಮಾರ್ ನಾಯ್ಕ್ ಹಾಗೂ ನಿವೃತ್ತ ಶಿಕ್ಷಕಿ ಶ್ರೀಮತಿ ಸುಜಾತಾ ಬಿ. ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ದಿವಸ್ಪತಿ ಅವರು ಅತಿಥಿಗಳನ್ನು ಸ್ವಾಗತಿಸಿ, ದಿನದ ಮಹತ್ವದ ಕುರಿತು ಮಾತನಾಡಿದರು. ಹತ್ತನೇ ತರಗತಿಯ ವಿದ್ಯಾರ್ಥಿನಿ ಶಿವಗಂಗಮ್ಮ ಕಾರ್ಯಕ್ರಮ ನಿರೂಪಿಸಿ, ಕುಮಾರಿ ಸೌಮ್ಯ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಶ್ರೀಹರಿ ಎಂ. ಅವರ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು ಹಾಗೂ ಮುಖ್ಯ ಅತಿಥಿ ಶ್ರೀಮತಿ ಲಾವಣ್ಯ ಅವರ ವತಿಯಿಂದ ಮಧ್ಯಾಹ್ನದ ಬಿಸಿಯೂಟದೊಂದಿಗೆ ಪಾಯಸದ ವ್ಯವಸ್ಥೆ ಮಾಡಲಾಗಿತ್ತು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ನೃತ್ಯ ಕಾರ್ಯಕ್ರಮಗಳು ಅತ್ಯಂತ ಉತ್ಸಾಹದಿಂದ ಜರುಗಿದವು. ಕಾರ್ಯಕ್ರಮದಲ್ಲಿ ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಪೋಷಕರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

