ಮಂಗಳೂರು: ಮಂಗಳೂರು ನಗರ ಉತ್ತರ ಮಂಡಲದ ಭಾರತೀಯ ಜನತಾ ಪಾರ್ಟಿ ವತಿಯಿಂದ ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ “ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ” ಅಭಿಯಾನದ ಅಂಗವಾಗಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಏರಿಕೆಯಿಂದಾಗಿ ಈಗಾಗಲೇ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಮತ್ತಷ್ಟು ಆರ್ಥಿಕ ಹೊರೆ ಉಂಟಾಗಿದೆ. ಚುನಾವಣೆಯ ಸಂದರ್ಭದಲ್ಲಿ ಎಲ್ಲರಿಗೂ ಉಚಿತ, ಉಚಿತ ಎಂದು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಇದೀಗ ದರ ಏರಿಕೆಗಳ ಮೂಲಕ ಜನರಿಂದಲೇ ಹಣ ವಸೂಲಿ ಮಾಡುತ್ತಿದೆ ಎಂದು ಅವರು ಟೀಕಿಸಿದರು.
ಜನಸಾಮಾನ್ಯರ ಮೇಲೆ ನಿರಂತರ ಹೊರೆ ಹೇರುತ್ತಿರುವ ರಾಜ್ಯ ಸರ್ಕಾರದ ಜನವಿರೋಧಿ ನಿರ್ಧಾರಗಳನ್ನು ಬಿಜೆಪಿ ಸಹಿಸುವುದಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಜನರನ್ನೇ ಸಂಕಷ್ಟಕ್ಕೆ ತಳ್ಳುತ್ತಿರುವ ಸರ್ಕಾರದ ವಿರುದ್ಧ ಜನರ ಧ್ವನಿಯಾಗಿ ಬಿಜೆಪಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಿದೆ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಎಚ್ಚರಿಸಿದರು.

