ಮುಜುಂಗಾವು: ಶ್ರೀ ಭಾರತಿ ವಿದ್ಯಾಪೀಠ, ಮುಜುಂಗಾವಿನಲ್ಲಿ ‘ಪ್ರತಿಭಾ ಭಾರತಿ’ ಕಾರ್ಯಕ್ರಮವು ನವೆಂಬರ್ 27ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಕೃಷ್ಣಯ್ಯ ಅನಂತಪುರ ಅವರು ಮಾತನಾಡುತ್ತಾ, “ಪ್ರತಿಭೆಗಳು ಮೊಳಕೆ ಒಡೆಯುವುದು ಶಾಲೆಗಳಲ್ಲಿ. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಮಾತ್ರ ಅವು ಹೆಮ್ಮರವಾಗಿ ಬೆಳೆಯಲು ಸಾಧ್ಯ” ಎಂದರಲ್ಲದೇ,. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಸೂಕ್ತ ವೇದಿಕೆ ಹಾಗೂ ಪ್ರೋತ್ಸಾಹ ನೀಡುವಲ್ಲಿ ಶಾಲೆಗಳ ಪಾತ್ರ ಮಹತ್ವದ್ದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ, ಆಡಳಿತ ಸಮಿತಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ಪಿ.ಟಿ.ಎ ಅಧ್ಯಕ್ಷ ಉದಯಕುಮಾರ್ ಮಾಯಿಪ್ಪಾಡಿ ಹಾಗೂ ಮುಖ್ಯೋಪಾಧ್ಯಾಯರಾದ ಶ್ಯಾಮ್ ಭಟ್ ದರ್ಬೆಮಾರ್ಗ, ಸಹ ಮುಖ್ಯ ಶಿಕ್ಷಕಿ ಚಿತ್ರಾ ಸರಸ್ವತಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡರು. ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ಹತ್ತನೇ ತರಗತಿಯ ಚಿತ್ತಾರ ಸ್ವಾಗತಿಸಿದರು. 9ನೇ ತರಗತಿಯ ಸಿಂಚನ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಹತ್ತನೇ ತರಗತಿಯ ಕನಿಹಾ ಧನ್ಯವಾದ ಸಮರ್ಪಿಸಿದರು. ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

