ಸುರತ್ಕಲ್: ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ದಿ. ನಾರಾಯಣಾಚಾರ್ ಅವರ ಸ್ಮರಣಾರ್ಥ ದತ್ತಿನಿಧಿ ಕಾರ್ಯಕ್ರಮವು ಇತ್ತೀಚೆಗೆ ಸುರತ್ಕಲ್‌ನ ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು.
ಹಿಂದೂ ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಜಯಚಂದ್ರ ಹತ್ವಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಣ್ಣಗುಡ್ಡೆ ಗುರ್ಜಿ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕೃಷ್ಣಮೂರ್ತಿ ರಾವ್ ಮಾತನಾಡಿ, “ನಾರಾಯಣಾಚಾರ್ ಅವರ ಶಿಸ್ತು, ಪ್ರಾಮಾಣಿಕತೆ ಹಾಗೂ ಸೇವಾ ಮನೋಭಾವ ಎಲ್ಲರಿಗೂ ಸ್ಫೂರ್ತಿದಾಯಕ. ಅವರ ಸವಿನೆನಪಿನಲ್ಲಿ ಹಳೆ ವಿದ್ಯಾರ್ಥಿಗಳು ಕೈಗೊಂಡಿರುವ ಈ ಕಾರ್ಯ ನಿಜಕ್ಕೂ ಶ್ಲಾಘನೀಯ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೇಜಾವರ ಹಾಗೂ ಮಂಗಳೂರು ಅಶೋಕನಗರದ ಬೋಳೂರು ಸಾವಿತ್ರಿ ವಾಸುದೇವ ರಾವ್ ಚಾರಿಟೇಬಲ್ ಟ್ರಸ್ಟ್‌ನ ನಿರ್ದೇಶಕ ಬಾಲಕೃಷ್ಣ ಹೆಚ್. ಅತಿಥಿಗಳಾಗಿ ಉಪಸ್ಥಿತರಿದ್ದರು. ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಚ್.ವಿ. ರಾಘವೇಂದ್ರ, ಶಾಲಾ ಸಂಚಾಲಕ ವಿಶ್ವರಾಜ್ ಇಡ್ಯಾ, ಶಾಲಾ ಪ್ರಾಂಶುಪಾಲ ಶಶಿಕುಮಾರ್ ಕೆ.ಸಿ. ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ದತ್ತಿನಿಧಿ ಕಾರ್ಯಕ್ರಮದ ಅಂಗವಾಗಿ ವಿದ್ಯಾದಾಯಿನೀ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಪೂರ್ಣಿಮಾ ಸ್ವಾಗತಿಸಿದರು. ಮೋಹಿತ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ಎಸ್. ವಂದಿಸಿದರು.

